
ಹಿರಿಯೂರು :
ಆಡು ಮುಟ್ಟದ ಸೊಪ್ಪಿಲ್ಲ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಾಡದಿರುವ ಕಾರ್ಯವಿಲ್ಲ ಎಂಬಂತೆ ಪರಮಪೂಜ್ಯ ವೀರೇಂದ್ರ ಹೆಗಡೆಯವರ ನೇತೃತ್ವದಲ್ಲಿ ಸ್ಥಾಪನೆಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಹಿಳೆಯರ ಆರ್ಥಿಕ ಸಬಲೀಕರಣ, ವಿದ್ಯಾರ್ಥಿ ವೇತನ, ವಸತಿ ನಿರ್ಮಾಣ ಸೇರಿದಂತೆ ಶುದ್ಧ ಕುಡಿಯುವ ನೀರಿನ ಘಟಕದ ಸ್ಥಾಪನೆಗೂ ಮುಂದಾಗಿರುವುದು ನಿಜಕ್ಕೂ ಶ್ಲಾಘನೀಯ ಕಾರ್ಯವಾಗಿದೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು.
ತಾಲೂಕಿನ ಆದಿವಾಲ ಭಾಗದ ಪಟ್ರೇಹಳ್ಳಿ ಗ್ರಾಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಹಿರಿಯೂರು ಹಾಗೂ ಆದಿವಾಲ ಗ್ರಾಮ ಪಂಚಾಯಿತಿ ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ 571 ನೇ ಶುದ್ಧ ಗಂಗಾ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿ, ನಂತರ ಅವರು ಮಾತನಾಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗ್ರಾಮಸ್ಥರಿಗೆ ಸುರಕ್ಷಿತ, ಸ್ವಚ್ಛ ಮತ್ತು ನಿರಂತರ ಕುಡಿಯುವ ನೀರು ಲಭ್ಯವಾಗಲಿದೆ. ಜನರ ಆರೋಗ್ಯವೇ ನಮ್ಮ ಮೊದಲ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಆದಿವಾಲ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಶುದ್ಧ ಗಂಗಾ ಕುಡಿಯುವ ನೀರಿನ ಘಟಕ ಸ್ಥಾಪಿಸಿರುವುದು ಅತ್ಯಂತ ಮಹತ್ವದ ಹೆಜ್ಜೆಯಾಗಿದೆ ಎಂಬುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಪಟ್ರೇಹಳ್ಳಿ ಗ್ರಾಮಗದ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
