
ಹಿರಿಯೂರು :
ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆಗಳು ಹಾಗೂ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಸೌಲಭ್ಯಗಳನ್ನು ಒದಗಿಸುವ ದಿಸೆಯಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಯೋಜನೆಗಳನ್ನು ಸಮರ್ಪಕವಾಗಿ ರೂಪಿಸಿ ಶೀಘ್ರ ಜಾರಿಗೆ ತರುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಪ್ರವಾಸಿ ಮಂದಿರದಲ್ಲಿ ಕೆ.ಎಂ.ಇ.ಆರ್.ಸಿ ಯೋಜನೆಯಡಿ ಆರೋಗ್ಯ ಹಾಗೂ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಅಭಿವೃದ್ಧಿ ಕಾಮಗಾರಿಗಳ ಕ್ರಿಯಾ ಯೋಜನೆ ಮತ್ತು ಅಂದಾಜು ಪಟ್ಟಿ ತಯಾರಿಸುವ ಕುರಿತು ಕರೆಯಲಾಗಿದ್ದ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ರಾಜ್ಯದಲ್ಲಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಮತ್ತಷ್ಟು ಬಲಪಡಿಸುವ ಮೂಲಕ ಜನಸಾಮಾನ್ಯರಿಗೆ ನೇರ ಪ್ರಯೋಜನ ತಲುಪುವಂತೆ ಮಾಡಲು ನಮ್ಮ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಎಂಬುದಾಗಿ ಅವರು ಹೇಳಿದರು.
ಈ ಸಭೆಯಲ್ಲಿ ಶಿಕ್ಷಣ ಸುಧಾರಣಾ ಸಮಿತಿ ಅಧ್ಯಕ್ಷ ಅಮೃತೇಶ್ವರಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಂ.ತಿಪ್ಪೇಸ್ವಾಮಿ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
