
ಹಿರಿಯೂರು :
ಸರ್ಕಾರದ ಶಕ್ತಿ ಯೋಜನೆ ಜಾರಿಗೆ ಬಂದ ನಂತರ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ಎಲ್ಲ ಬಸ್ಸುಗಳು ಹಿರಿಯೂರು ನಗರದ ಒಳಗೆ ಕಡ್ಡಾಯವಾಗಿ ಸಂಚರಿಸುವ ವ್ಯವಸ್ಥೆ ಮಾಡಬೇಕು ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಮಾನ್ಯ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿ ರವರಿಗೆ ಮನವಿ ಮಾಡಿದರು.
ನಗರದಲ್ಲಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಸಿಗಬೇಕೆಂದು ಒತ್ತಾಯಿಸಿ, ಮಾನ್ಯ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿ ರವರಿಗೆ ಮನವಿಪತ್ರ ಸಲ್ಲಿಸಿ, ನಂತರ ಅವರು ಮಾತನಾಡಿದರು.
ನಗರ ಬಸ್ ನಿಲ್ದಾಣದಲ್ಲಿ ನಾಲ್ಕು ವಿಭಾಗಗಳಿಂದ ಸುಮಾರು 800ಕ್ಕೂ ಹೆಚ್ಚು ಬಸ್ಸುಗಳು ಸಂಚಾರ ಮಾಡುತ್ತಿದ್ದು, ರಾತ್ರಿ 7 ಗಂಟೆಯ ನಂತರ ಹಲವು ಬಸ್ಸುಗಳು ಹಿರಿಯೂರು ನಗರದ ಬಸ್ ನಿಲ್ದಾಣದ ಒಳಗೆ ಪ್ರವೇಶಿಸದೇ ಬೈಪಾಸ್ ಮೂಲಕ ಸಂಚರಿಸುತ್ತಿರುವುದರಿಂದ ಪ್ರಯಾಣಿಕರಿಗೆ ತೊಂದರೆ ಉಂಟಾಗುತ್ತಿದೆ,
ಹಾಗೆಯೇ ಸಂಜೆ 7 ಗಂಟೆಯ ನಂತರ ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ದಾವಣಗೆರೆ ಮತ್ತು ಬಳ್ಳಾರಿ ಜಿಲ್ಲೆಯ ಮುಖಾಂತರ ಸಂಚಸುವ ಬಸ್ಸುಗಳು ನಗರದ ಒಳಗೆ ಸಂಚರಿಸದೆ ಬೈಪಾಸ್ ಮೂಲಕ ಸಂಚರಿಸುವುದಾಗಿ ಪ್ರಯಾಣಿಕರಿಗೆ ತೊಂದರೆ ಕೊಡುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬಂದಿದ್ಧು, ಎಲ್ಲ ಬಸ್ಸುಗಳು ನಗರದ ಒಳಗೆ ಕಡ್ಡಾಯವಾಗಿ ಸಂಚರಿಸುವಂತೆ ಒತ್ತಾಯಿಸಿದರು.
ಈ ಕುರಿತು ಪ್ರತಿಕ್ರಿಯಿಸಿದ ಮಾನ್ಯ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿರವರು ವಿಷಯವನ್ನು ಗಮನಿಸಿ ತುರ್ತಾಗಿ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಎಲ್ಲಾ ಬಸ್ಸುಗಳು ಬಸ್ ನಿಲ್ದಾಣದೊಳಗೆ ಪ್ರವೇಶಿಸುವಂತೆ ಕ್ರಮ ಕೈಗೊಳ್ಳುವುದು ಹಾಗೂ ಗಾಂಧಿವೃತ್ತ ಮತ್ತು ಟಿ.ಬಿ. ಸರ್ಕಲ್ ಪ್ರದೇಶಗಳಿಗೆ ಪ್ರತ್ಯೇಕ ಹಂತಗಳನ್ನು ನಿಗದಿಪಡಿಸುವ ಕುರಿತು ಕ್ರಮ ಕೈಗೊಳ್ಳುವಂತೆ ಸಾರಿಗೆ ಸಚಿವರಿಗೆ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ರವರ ಜೊತೆಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರು ಹಾಗೂ ತಾಲ್ಲೂಕು ಶಿಕ್ಷಣ ಸುಧಾರಣಾ ಸಮಿತಿ ಅಧ್ಯಕ್ಷರಾದ ಅಮೃತೇಶ್ವರಸ್ವಾಮಿ, ಸೇರಿದಂತೆ ಇತರೆ ಕಾಂಗ್ರೆಸ್ ಮುಖಂಡರುಗಳು ಉಪಸ್ಥಿತರಿದ್ದರು.
