
ಹಿರಿಯೂರು :
ರೈತರಿಗೆ ಆಧುನಿಕ ಕೃಷಿ ಪದ್ಧತಿಗಳು, ನೂತನ ತಂತ್ರಜ್ಞಾನಗಳು ಹಾಗೂ ತೋಟಗಾರಿಕಾ ಕ್ಷೇತ್ರದ ಹೊಸ ಅವಕಾಶಗಳ ಕುರಿತು ಅರಿವು ಮೂಡಿಸುವ ಇಂತಹ ಕಾರ್ಯಕ್ರಮಗಳು ಕೃಷಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಅತ್ಯಂತ ಮಹತ್ವದ್ದಾಗಿವೆ ಎಂಬುದಾಗಿ ಹಿರಿಯೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸುಹಾಸ್ ಸುಧಾಕರ್ ಹೇಳಿದರು.
ತಾಲ್ಲೂಕಿನ ಹರಿಯಬ್ಬೆ ಗ್ರಾಮದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗೂ ತೋಟಗಾರಿಕಾ ಮಹಾವಿದ್ಯಾಲಯ, ಹಿರಿಯೂರು ಇವರ ವತಿಯಿಂದ ಆಯೋಜಿಸಲಾಗಿದ್ದ ಕೃಷಿ ಮತ್ತು ತೋಟಗಾರಿಕಾ ವಸ್ತು ಪ್ರದರ್ಶನ ಹಾಗೂ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ, ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು.
ರೈತರ ಶ್ರೇಯೋಭಿವೃದ್ಧಿ, ಕೃಷಿಯ ಆಧುನೀಕರಣ ಹಾಗೂ ಯುವಜನತೆಯನ್ನು ಕೃಷಿಯತ್ತ ಪ್ರೋತ್ಸಾಹಿಸುವುದು ನಮ್ಮೆಲ್ಲರ ಆದ್ಯತೆಯಾಗಬೇಕು. ಈ ಮಹತ್ವದ ಕಾರ್ಯಕ್ರಮವನ್ನು ಆಯೋಜಿಸಿದ ವಿಶ್ವವಿದ್ಯಾಲಯ ಹಾಗೂ ತೋಟಗಾರಿಕಾ ಮಹಾವಿದ್ಯಾಲಯದ ಆಡಳಿತ ಮಂಡಳಿ, ಪ್ರಾಧ್ಯಾಪಕರು ಮತ್ತು ಸಿಬ್ಬಂದಿ ವರ್ಗದವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂಬುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಹರಿಯಬ್ಬೆ ಗ್ರಾಮದ ಮುಖಂಡರುಗಳು, ರೈತ ಮುಖಂಡರುಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
