
ಹಿರಿಯೂರು :
ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಕಾನೂನಿನ ಅರಿವು ಬೆಳೆಸಿಕೊಳ್ಳಬೇಕು, ಈಗಿನಿಂದಲೇ ವಿದ್ಯಾರ್ಥಿಗಳು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂಬುದಾಗಿ ಸಂಪನ್ಮೂಲ ವ್ಯಕ್ತಿಗಳಾದ ವಾಣಿ ಸಕ್ಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕರಾದ ಸಿ.ಮಂಜುನಾಥ ತಿಳಿಸಿದರು.
ನಗರದ ಗುರುಭವನದಲ್ಲಿ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ಅಂಗವಾಗಿ ಯುವ ಸಂಸತ್ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ, ಅವರು ಮಾತನಾಡಿದರು.

ರಾಜಕೀಯ ಜಾಗೃತಿ ಇಂದಿನ ಯುವಕರೇ ಮುಂದಿನ ಸಂಸದೀಯ ಪಟಗಳು ವಿದ್ಯಾರ್ಥಿಗಳಿಗೆ ರಾಜಕೀಯ ಪ್ರಜ್ಞೆಯನ್ನು ಮೂಡಿಸುವುದು ಪ್ರಜಾಪ್ರಭುತ್ವದ ಮೌಲ್ಯಗಳನ್ನು ವಿದ್ಯಾರ್ಥಿಗಳು ಅನುಸರಿಸುವುದು ಉತ್ತಮ ನಾಗರೀಕ ಸಮಾಜದ ನಿರ್ಮಾಣಕ್ಕಾಗಿ ಯುವಶಕ್ತಿಯ ಪಾತ್ರದ ಬಗ್ಗೆ ವಿವರಿಸಿದರು.
ಲಿಂಗ, ಸಮಾನತೆ, ಪ್ರಜಾಪ್ರಭುತ್ವ ಭಾಗವಹಿಸಿಕೆಯಲ್ಲಿ ಯುವಕರ ಪಾತ್ರದ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದ ಅವರು ಆಧುನಿಕ ಯಂತ್ರೋಪಕರಣಗಳನ್ನು ಬಳಸಿಕೊಂಡು ಯುವಕರು ಹೇಗೆ ಕೃಷಿಯಲ್ಲಿ ಪ್ರಗತಿಯನ್ನು ಸಾಧಿಸಬಹುದು, ಆಧುನಿಕ ಕೃಷಿಯಲ್ಲಿ ಅಳವಡಿಸಿಕೊಳ್ಳುವ ವಿಧಾನಗಳ ಕುರಿತು ವಿವರಿಸಿದರು.
ಇನ್ನೊಬ್ಬ ಸಂಪನ್ಮೂಲ ವ್ಯಕ್ತಿಗಳಾದ ವಾಣಿ ಸಕ್ಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕರಾದ ಆರ್.ತಿಪ್ಪೇಸ್ವಾಮಿ ಮಾತನಾಡಿ, ವಿಧಾನಸಭೆಯ ಅಧಿವೇಶನ ಕಲಾಪಗಳ ಬಗ್ಗೆ ಸದನದ ನಡಾವಳಿಗಳ ಬಗ್ಗೆ ಸಭಾಪತಿಗಳ ಕಾರ್ಯ, ಪ್ರಶ್ನೋತ್ತರ ವೇಳೆ, ಶೂನ್ಯ ವೇಳೆ, ಗಮನ ಸೆಳೆಯುವ ಸೂಚನೆ, ವಿದೇಯಕದ ಮಂಡನೆ ವಿದೇಯಕದ ಮೇಲಿನ ಚರ್ಚೆ ವಿದೇಕ ಅಂಗೀಕಾರದ ಬಗ್ಗೆ ವಿಸ್ತೃತವಾಗಿ ವಿವರಿಸಿದರು.
ಈ ಕಾರ್ಯಕ್ರಮದಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯ ಘಟಕ ಕಾಲೇಜು ಹರಿಯಬ್ಬೆ ರಾಜ್ಯಶಾಸ್ತ್ರ ಉಪನ್ಯಾಸಕ ಟಿ.ಯಶೋಧರ, ದಾವಣಗೆರೆ ವಿಶ್ವವಿದ್ಯಾನಿಲಯ ಸಮಾಜಶಾಸ್ತ್ರ ಉಪನ್ಯಾಸಕರಾದ ಜಿ.ರಾಮಣ್ಣ, ಕಾರ್ಯಕ್ರಮದ ಆಯೋಜಕರಾದ ಸಮಾಜ ಕಲ್ಯಾಣ ಇಲಾಖೆಯ ದಯಾನಂದ ಮತ್ತು ಮನೋಹರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
