
ಹಿರಿಯೂರು :
ವಿದ್ಯಾರ್ಥಿ ಜೀವನದಲ್ಲಿ ಪದವಿ ಶಿಕ್ಷಣ ಅತ್ಯಂತ ಪ್ರಮುಖ ಘಟ್ಟವಾಗಿದ್ದು, ಈ ಹಂತದಲ್ಲಿ ಹೆಚ್ಚಿನ ಜವಾಬ್ದಾರಿ ಅಗತ್ಯವಿದ್ದು, ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚಿನ ಆಸಕ್ತಿ ವಹಿಸಿ ಉತ್ತಮ ರೀತಿಯಲ್ಲಿ ತೇರ್ಗಡೆ ಹೊಂದಿ ಕಾಲೇಜಿಗೆ ಒಳ್ಳೆಯ ಫಲಿತಾಂಶವನ್ನು ತಂದುಕೊಡಬೇಕು ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರು ಹೇಳಿದರು.

ನಗರದ ವಾಣಿಸಕ್ಕರೆ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ 2025-26 ನೇ ಸಾಲಿನ ಕ್ರೀಡಾ ಮತ್ತು ಸಾಂಸ್ಕೃತಿಕ, ರಾಷ್ಟ್ರೀಯ ಸೇವಾ ಯೋಜನೆ ಕಾರ್ಯ ಚಟುವಟಿಕೆಗಳ ಸಮಾರಂಭವನ್ನು ಉದ್ಘಾಟಿಸಿ ನಂತರ ಅವರು ಮಾತನಾಡಿದರು.

ಸರ್ಕಾರ ವಿದ್ಯಾರ್ಥಿಗಳ ವಿದ್ಯಾಭ್ಯಾಸ ಹಾಗೂ ಉನ್ನತ ಶಿಕ್ಷಣಕ್ಕಾಗಿ ಅತಿ ಹೆಚ್ಚಿನ ಸೌಲಭ್ಯಗಳನ್ನು ನೀಡುತ್ತಿದ್ದು, ಅವುಗಳ ಬಗ್ಗೆ ಸರಿಯಾದ ಮಾಹಿತಿ ಪಡೆದು, ಅವುಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂಬುದಾಗಿ ಅವರು ಹೇಳಿದರು.

ಈ ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷರಾದ ಬಾಲಕೃಷ್ಣ ಆಚಾರ್, ಕಾಲೇಜಿನ ಪ್ರಾಂಶುಪಾಲರಾದ ಡಾ.ಮಹೇಶ್, ಮಾಜಿ ನಗರಸಭಾ ಸದಸ್ಯರಾದ ಪ್ರೇಮಕುಮಾರ್, ಉಪನ್ಯಾಸಕರಾದ ಡಾ.ಡಿ.ಧರಣೇಂದ್ರಯ್ಯ, ಗಿಡ್ಡೋಬನಹಳ್ಳಿ ಅಶೋಕ್, ಸೇರಿದಂತೆ ಕಾಲೇಜು ಅಧ್ಯಾಪಕರುಗಳು ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
